October 29, 2026
#ಬೆಂಗಳೂರು

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ದಾಳಿ

ಚಿತ್ರದುರ್ಗದಲ್ಲಿಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹಾಸನದಲ್ಲಿ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

ಹಾವೇರಿಯಲ್ಲಿ ರೇಡ್

ಹಾವೇರಿಯ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ‌

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್​​

ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದಾರೆ. ಕೆ.ಆರ್.​ಪುರಂ ಎಆರ್​ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ,

Leave a comment

Your email address will not be published. Required fields are marked *