ಕಾಂಗ್ರೆಸ್ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲ
ಬೆಂಗಳೂರು:
ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇನ್ನು ಇದಕ್ಕೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್, ತನ್ನ ಚುನಾವಣಾ ಗ್ಯಾರಂಟೀಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿಯೂ ಮುಂದಿನ ಚುನಾವಣೆಯಲ್ಲಿ ಜನತೆ ಕೈ ಗೆ `ಕೈ’ ಕೊಡಲಿದ್ದಾರೆ ಎಂದಿದ್ದಾರೆ.








































































































































































































































































































































































































































































































































































































































































































































































































































































































































































































































































































































