September 14, 2026
#ಬೆಂಗಳೂರು

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭಾರೀ ಭ್ರಷ್ಟಾಚಾರ

ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬAಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ರ‍್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು. ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
ಬಿಬಿಎಂಪಿ ತೆರಿಗೆ ಸಗ್ರಹದಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ಗೊತ್ತಾಗಿದ್ದು, ವಲಯಾಧಿಕಾರಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ಗೆ ಶಿಫಾರಸು ಮಾಡಿದ್ದಾರೆ. ಇದರ ಬೆನ್ನಲ್ಲೇ ಆರ್ ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಬಿಬಿಎಂಪಿ ವಲಯ ವ್ಯಾಪ್ತಿಗಳಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳಿಗೆ ನೋಟಿಸ್ ನೀಡಿ ತೆರಿಗೆ ಸಂಗ್ರಹಕ್ಕೆ ಮುಂದಾಗುವ ಬಗ್ಗೆ ಮೌದ್ಗಿಲ್ ತೆರಿಗೆ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ಈ ಸೂಚನೆ ಪಾಲನೆಯಾಗಿಲ್ಲ. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ. ಪರಿಣಾಮವಾಗಿ ಬಿಬಿಎಂಪಿಗೆ ಬರಬೇಕಾದ ತೆರಿಗೆ ಹಣ ಬಂದಿಲ್ಲ ಎಂದು ಮೌದ್ಗಿಲ್ ಅವರು ಆಯುಕ್ತರ ಬಳಿ ಆರೋಪಿಸಿದ್ದರು. ಹೀಗಾಗಿ ವಲಯಾಧಿಕಾರಿಗಳ ವಿರುದ್ಧವೇ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದರು.
ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕಳೆದ ತಿಂಗಳು ಕಾರ್ಯಾಚರಣೆ ಆರಂಭಿಸಿದ್ದ ಬಿಬಿಎಂಪಿ, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್ ಮಾಡುವ ಕಾರ್ಯ ಕೈಗೊಂಡಿತ್ತು. ಅದಕ್ಕೂ ಕೆಲವು ದಿನಗಳ ಮೊದಲು, ಹೆಚ್ಚು ಪ್ರಮಾಣದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಕಾರು, ಬೈಕ್ ಜಪ್ತಿ ಮಾಡಲು ಆರಂಭಿಸಿತ್ತು.

Leave a comment

Your email address will not be published. Required fields are marked *